ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿರುವ ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ತಿಳಿಸಿದ್ದಾರೆ.
ಕಾನೂನಿನ ಮೇಲೆ ನಂಬಿಕೆ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಇದು ಬೆಂಗಳೂರು-ಮೈಸೂರು ಪಾದಯಾತ್ರೆ ಹೋರಾಟಕ್ಕೆ ಸಂದ ಮೊದಲ ಜಯ ಎಂದು ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಡಲೇ ರಾಜೀನಾಮೆ ನೀಡಬೇಕೆಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿರುವುದು ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು ಎಂದು ಹೇಳಿದ್ದಾರೆ.
ಈ ನಡುವೆ ಮುಡಾ ಪ್ರಕರಣದ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲರ ನಿರ್ಣಯ ಎತ್ತಿಹಿಡಿದ ಉಚ್ಚನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ವಿರುದ್ಧ ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆಯೇ ಎಂದು ಪ್ರಶ್ನಿಸಿದರು.
ಬಿಜೆಪಿ ಎಂದಿಗೂ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.