ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆ
ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ಕೈಗಾರಿಕಾ ಪ್ರದೇಶವನ್ನು ವಿಸ್ತೀರ್ಣ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದ್ದಾರೆ.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲೀಕರಿಂದ ಪರಿಹಾರ ಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ.
ಈ ಕೂಡಲೇ ವಿಶೇಷ ಭೂ ಸ್ವಾಧೀನ ಅಧಿಕಾರಿಗಳು, ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.
ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 44.84 ಎಕ್ರೆ ಖಾಸಗಿ ಜಮೀನು ಹಾಗೂ 5.58 ಎಕ್ರೆ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 50.42 ಎಕ್ರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯು ಪ್ರಗತಿ ಕುಂಠಿತವಾಗಿರುವ ಬಗ್ಗೆ ವಿಷಾಧಿಸಿದ ಅವರು, ಈ ಬಗ್ಗೆ ವಿಶೇಷ ಗಮನಹರಿಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಅತ್ಯಗತ್ಯ ಮೂಲಸೌಕರ್ಯಗಳಾದ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೇ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕಾಗಿ ಸೂಚನೆ ನೀಡಿದರು.