ಬೆಂಗಳೂರು : ಚಂಡಮಾರುತದ ಕಾರಣದಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ಕೊಯ್ಲಿಗೆ ಬಂದಿರುವ ಭತ್ತದ ಗದ್ದೆಗೂ ಈ ಮಳೆ ಶಾಪವಾಗಿ ಪರಿಣಮಿಸಿದೆ.
ಈ ನಡುವೆ ಅಕ್ಟೋಬರ್ 21ರಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಅನ್ನುವ ಸುದ್ದಿಯನ್ನು ಹವಮಾನ ಇಲಾಖೆ India Meteorological Department (IMD) ನೀಡಿದೆ. ಅಕ್ಟೋಬರ್ 21ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಲಾಖೆಯ ಮಾಹಿತಿಯ ಪ್ರಕಾರ ಅಕ್ಟೋಬರ್ 21 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸುರಿಯುತ್ತಿರುವ ಮಳೆ ಮುಂದುವರಿಯುವ ಸಾಧ್ಯತೆಗಳಿದೆ.
ಈಗಾಗಲೇ ಕೇರಳದಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು ಅನೇಕ ಜೀವಗಳನ್ನು ಬಲಿ ಪಡೆದಿದೆ.
ಇನ್ನು ಇದೇ ತಿಂಗಳ 25 ರಿಂದ 1 ರಿಂದ 5ನೇ ತರಗತಿ ಪ್ರಾರಂಭವಾಗಲಿದ್ದು, ಉತ್ಸಾಹದಿಂದ ಶಾಲೆಗೆ ಹೊರಟ ಮಕ್ಕಳಿಗೆ ಮಳೆ ಅಡ್ಡಿಯಾಗುವ ಸಾಧ್ಯತೆಗಳಿದೆ. ಈ ನಡುವೆ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಟೋಬರ್ 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಸಂಬಂಧ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Discussion about this post