ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ನೌಕರರು ಸರ್ಕಾರದ ಮುಂದಿಟ್ಟಿದ್ದ 10 ಬೇಡಿಕೆಗಳ ಪೈಕಿ 9ನ್ನು ಈಡೇರಿಸಲು ಒಪ್ಪಿರುವ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಸರ್ಕಾರ ನಮ್ಮ ಪ್ರಮುಖ ಬೇಡಿಕೆಯೊಂದನ್ನು ಈಡೇರಿಸಿಲ್ಲ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಹಾಗಂತ ಆ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಆದರೆ ಸರ್ಕಾರ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಭರವಸೆ ಕೊಟ್ಟಿದೆ. ಹೀಗಾಗಿ ನಾವು ಪ್ರತಿಭಟನೆಯನ್ನು ಅಂತ್ಯಗೊಳಿಸೋಣ ಅಂದಿದ್ದಾರೆ.
ಆದರೆ ಮುಂದಿನ ಮೂರು ತಿಂಗಳ ಒಳಗಾಗಿ 9 ಬೇಡಿಕೆಗಳನ್ನು ಈಡೇರಿಸಲು ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳ ಒಳಗಾಗಿ ಬೇಡಿಕೆ ಈಡೇರದಿದ್ರೆ ಮತ್ತೆ ಬೀದಿಗೆ ಬರುವುದಾಗಿ ಹೇಳಲಾಗಿದೆ.
ಒಟ್ಟಿನಲ್ಲಿ ಸಾಕಷ್ಟು ಹೈಡ್ರಾಮಾಗಳಿಗೆ ಸಾಕ್ಷಿಯಾದ ಪ್ರತಿಭಟನೆ ಕೊನೆಗೆ ಮುಗಿಯಿತಲ್ಲ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
Discussion about this post