ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರು ನಾಪತ್ತೆಯಾಗಿದ್ದು, ಉಳ್ಳಾಲ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ.
ಸೋಮವಾರ ಸಂಜೆ ವ್ಯವಹಾರ ನಿಮಿತ್ತ ಸಿದ್ಧಾರ್ಥ್ ಅವರು ತಮ್ಮ ಕಾರಿನಲ್ಲಿ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ ಮಂಗಳೂರಿಗೆ ಹೋಗಿದ್ದರು. ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ಸೇತುವೆ ಇದ್ದು, ಇಲ್ಲಿಗೆ ತಲುಪುತ್ತಿದ್ದಂತೆ ಕಾರನ್ನು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ಬಳಿಕ ಕಾರಿನಿಂದ ಇಳಿದು ಅವರು ಫೋನ್ನಲ್ಲಿ ಮಾತನಾಡುತ್ತಾ ಹೋಗಿದ್ದಾರೆ. ಆದರೆ ಹಲವು ಗಂಟೆಯಾದರೂ ಸಿದ್ಧಾರ್ಥ್ ಅವರು ವಾಪಸ್ ಬರದೇ ಇದ್ದುದನ್ನು ಕಂಡು ಗಾಬರಿಯಾದ ಚಾಲಕ ಬಸವರಾಜ್ ಅವರಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಅವರ ಫೋನ್ ಸ್ವಿಚ್ಡ್ ಆಫ್ ಆಗಿದ್ದು ಗಮನಕ್ಕೆ ಬಂದಿದೆ.
ಇದಕ್ಕೆ ಆತಂಕಿತರಾದ ಚಾಲಕ ಪೊಲೀಸ್ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ನದಿ ತುಂಬಿ ಹರಿಯುತ್ತಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮಾಜಿ ಸಚಿವ ಯು.ಟಿ.ಖಾದರ್ ಸೇರಿದಂತೆ ಜಿಲ್ಲಾಧಿಕಾರಿ, ಡಿಸಿಪಿಗಳು ಭೇಟಿ ನೀಡಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸಿದ್ದಾರ್ಥ ಅವರ ಅನೇಕ ಮಿತ್ರರು ಸ್ಥಳಕ್ಕೆ ಆಗಮಿಸಿದ್ದಾರೆ.
Discussion about this post