ಬೆಳಗಾವಿ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಬೆಳಗಾವಿಯ ಹಿರಣ್ಯಕೇಶಿ ನದಿ ಪಾತ್ರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ ಭೇಟಿ ನೀಡಿ ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು.
ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಹಾಗೂ ನದಿಗಲ್ಲಿಯ ಬಳಿಯ ಮುಳುಗಡೆ ಪ್ರದೇಶಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಇದೇ ವೇಳೆ ಸಂತ್ರಸ್ಥರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ಪಟ್ಟಣದಲ್ಲಿ ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಸಲುವಾಗಿ ಐವತ್ತು ಎಕರೆ ಭೂಮಿ ಲಭ್ಯವಿದ್ದು, ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ ಎಂದರು.
ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ಕೈಗೊಂಡು ನಂತರ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ ಸಿಎಂ ತಾತ್ಕಾಲಿಕವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜನ ಭಯ ಪಡೋ ಅಗತ್ಯವಿಲ್ಲ. ಸರ್ಕಾರ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಿದರು.
ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆಯಾಗುತ್ತಿರುವ ಕಾರಣ ಬೆಳಗಾವಿಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿ ಜಿಲ್ಲೆಯ ನದಿಗಳು ಉಕ್ಕಿ ಹರಿದಿದ್ದು ಅಕ್ಕಪಕ್ಕದ ಕೆಲ ಗ್ರಾಮಗಳು ಜಲಾವೃತಗೊಂಡಿದೆ.
Discussion about this post