ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಥವಾ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಾರ್ಯಕರ್ತರಿಗೆ ಭಾನುವಾರ ಮನವಿ ಮಾಡಿದ್ದಾರೆ.
ಮೈತ್ರಿ ಸರ್ಕಾರ, ಸಿಎಂ ಅಥವಾ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದು ಎಂದು ನಮ್ಮಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದಕ್ಕು ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟಿರುವ 9 ಮಂದಿ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಈಗ ಕಾಂಗ್ರೆಸ್‌ನಿಂದ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರು ನನ್ನ ಆಪ್ತರೇ ಆಗಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದರು.
Discussion about this post