ನೋಟು ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ಬಂಧಿಸಿದೆ.
ಕಳೆದ ಶುಕ್ರವಾರದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದರು. ಆದರೆ, ತನಿಖೆಗೆ ಸಹಕರಿಸದಿರುವ ಆರೋಪದ ಮೇರೆಗೆ ಅವರನ್ನು ಬಂಧಿಸಲಾಗಿದ್ದು, ನಾಳೆ ಕೋರ್ಟ್ ಗೆ ಹಾಜರುಪಡಿಸಲಾಗುತ್ತದೆ.
ತನಿಖೆಗೆ ಸಹಕರಿಸದ ಆರೋಪದ
ಹಿನ್ನೆಲೆಯಲ್ಲಿ ಡಿಕೆಶಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ನೀಡುವಂತೆ ಇಡಿ ನ್ಯಾಯಾಲಯದ ಬಳಿ ಮನವಿ
ಮಾಡಿಕೊಳ್ಳಲಿದೆ. ಒಂದು ವೇಳೆ ಇಡಿ ಮನವಿಗೆ ಪುರಸ್ಕಾರ ಸಿಗದಿದ್ದರೆ ಡಿಕೆಶಿಗೆ ನ್ಯಾಯಾಂಗ ಬಂಧನ
ವಿಧಿಸಲಾಗುತ್ತದೆ. ಈ ವೇಳೆ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.
ನಂತರ ಅವರು ಜಾಮೀನಿಗೆ ಅರ್ಜಿ
ಸಲ್ಲಿಸಿ ಮುಂದಿನ ಕಾನೂನು ಹೋರಾಟ ಮುಂದುವರಿಸಬಹುದಾಗಿದೆ. ಆದರೆ ಇಡಿ ವಶಕ್ಕೆ ನೀಡಿದರೆ ಮುಂದಿನ
ದಿನಗಳಲ್ಲಿ ಮತ್ತಷ್ಟು ಸಂಕಷ್ಟವನ್ನು ಅವರು ಎದುರಿಸಬೇಕಾಗುತ್ತದೆ.
ಏನಿದು ಪ್ರಕರಣ?
2017ರ ಆಗಸ್ಟ್ 2 ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ದಾಖಲೆ ಇಲ್ಲದ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಪಾರ್ಟ್ ಮೆಂಟ್ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್ಗಳ ಸಹಾಯದಿಂದ ಡಿಕೆ ಶಿವಕುಮಾರ್ ಕೋಟ್ಯಂತರ ರೂ.ಗಳನ್ನು ಕಾಂಗ್ರೆಸ್ ಹೈಕಮಾಂಡ್ಗೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನೋಟು ನಿಷೇಧಗೊಂಡ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಸಾವಿರಾರು ಕೋಟಿ ರೂ.ಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
Discussion about this post