ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಮೂರು ತಿಂಗಳೊಳಗಾಗಿ ಸುಪ್ರೀಂ ಕೋರ್ಟ್ ಗೆ ವರದಿ
ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯಮಹಿಳಾ ಆಯೋಗ ಹಾಗೂ ಜಿಲ್ಲಾಡಳಿತದ ವತಿಯಿಂದ ಲೈಂಗಿಕ ದೌರ್ಜನ್ಯ ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ, ಆಂತರಿಕ ದೂರು ನಿರ್ವಹಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗಾಗಿ ಮಂಡ್ಯದಲ್ಲಿಂದು ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಲತಾ ಉದ್ಘಾಟಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳಿಕ ಲತಾ, ಮಹಿಳೆಯರು ಮತ್ತು ಮಕ್ಕಳ ಮೇಲೆ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಮೂರು ತಿಂಗಳೊಳಗಾಗಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಬೇಕಾಗಿದೆ. ಹೀಗಾಗಿ ಎಲ್ಲ ಜಿಲ್ಲಾಧಿಕಾರಿಗಳಿಂದ ವರದಿ ಕೇಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ಜಾಗ್ರತೆ ವಹಿಸಬೇಕು ಎಂದು ಅವರು ತಿಳಿಸಿದರು.
ಡಾ. ಕುಮಾರ, ಲೈಂಗಿಕ ದೌರ್ಜನ್ಯವಾದ ಸಮಯದಲ್ಲಿ ದೂರು ನೀಡುವ ಸಂಖ್ಯೆ ಕಡಿಮೆ. ಈ ರೀತಿಯ ಘಟನೆಗಳು ನಡೆದರೆ ದೂರು ನೀಡಬೇಕು. ಈ ಸಂಬಂಧ ರಚಿಸಲಾಗಿರುವ ಆಂತರಿಕ ಸಮಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು.
ತಪ್ಪಿದರೆ ಕಡೆಯ ದಿನ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಲ್ಲಿಕಾರ್ಜುನ ಬಾಲದಂಡಿ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಈ ನಿಟ್ಟಿನಲ್ಲಿ ಆಯಾ ಕ್ಷೇತ್ರದಲ್ಲಿ ದಾಖಲಾಗುವ ದೂರುಗಳನ್ನು ಆಧರಿಸಿ ಇತ್ಯರ್ಥಕ್ಕೆ ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.
ಶೇಕ್ ತನ್ವಿರ್ ಆಸೀಫ್, ದೌರ್ಜನ್ಯ ತಡೆಗಟ್ಟುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಅಧಿಕಾರಿಗಳದ್ದು ಎಂದು ಹೇಳಿದರು.
ಇದೇ ವೇಳೆ ಸಂಪನ್ಮೂಲ ವ್ಯಕ್ತಿಗಳಿಂದ ಮಹಿಳಾ ದೌರ್ಜನ್ಯ ಮತ್ತು ಕಿರುಕುಳಧ ಪ್ರಕರಣವನ್ನು ನಿರ್ವಹಿಸುವ ಸಂಬಂಧ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.