ಡೆಂಘಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡೋ ಸ್ಥಿತಿ ನಿರ್ಮಾಣವಾಗಿಲ್ಲ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘಿ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ನಿರಂತರ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಅಥವಾ ಔಷಧ ಕೊರತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದ್ದು ಮಳೆಗಾಲವಾಗಿದ್ದರಿಂದ ಜನರು ಹೆಚ್ಚು ಜಾಗೃತರಾಗಬೇಕು ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಹೆಚ್ಚು ಡೆಂಘಿ ಪ್ರಕರಣ ಕಂಡುಬರುವ ಸ್ಥಳಗಳಲ್ಲಿ ಫಿವರ್ ಕ್ಲಿನಿಕ್ ತೆರೆದು ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೂ ಜನರು ಹೆಚ್ಚು ಜಾಗೃತರಾಗಿರಬೇಕು ಎಂದು ಹೇಳಿದ್ದಾರೆ.
ಡೆಂಘಿ ಪರೀಕ್ಷೆಗೆ ಸರ್ಕಾರ ೩೦೦ ರೂಪಾಯಿ ನಿಗದಿಪಡಿಸಿದ್ದು ಇದಕ್ಕಿಂತ ಹೆಚ್ಚು ಶುಲ್ಕ ಪಡೆಯುವ ಲ್ಯಾಬ್ ಗಳ ವಿರುದ್ಧ ದೂರು ಕೇಳಿ ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
Discussion about this post