ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕ್ರಮವಹಿಸಿ : ಲೋ ಬಿ.ಎಸ್.ಪಾಟೀಲ್
ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಬದ್ಧವಾಗಿದೆ ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿ ಅಥವಾ ಸಿಬ್ಬಂದಿ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ತುಮಕೂರು ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಸರ್ಕಾರಿ ಕಚೇರಿ, ಆಸ್ಪತ್ರೆ, ವಿದ್ಯಾರ್ಥಿನಿಲಯ, ಗ್ರಾಮ ಪಂಚಾಯತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಸರ್ಕಾರಿ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿ, ಸಿಬ್ಬಂದಿಗಳು ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು ಎಂದು ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆ, ಕಚೇರಿಗಳಿಗೆ ಭೇಟಿ ನೀಡಲಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಅಧಿಕಾರಿಗಳು ತ್ವರಿತವಾಗಿ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.