ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಈಗಾಗಲೇ ಮಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಕೂಡಾ ಅಸ್ತವ್ಯಸ್ತಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹವಮಾನ ಇಲಾಖೆ ಪ್ರಕಾರ ಆಂಧ್ರಪ್ರದೇಶದ ಕರಾವಳಿ ಭಾಗ, ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಕೇರಳದ ಆರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಸುರಿಯಲಿದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನು ಕರ್ನಾಟಕದ ಮಟ್ಟಿಗೆ ಆಗಸ್ಟ್ 29, 30 ರಂದು ಕರಾವಳಿ ಮತ್ತು ಒಳನಾಡು ಜಿಲ್ಲೆಗಳು ಸೇರಿ 12 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಆಗಸ್ಟ್ 29 ರಂದು ಆರೆಂಜ್ ಅಲರ್ಟ್ ಮತ್ತು ಆಗಸ್ಟ್ 30 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳ ಕಾಲ ಕಲಬುರ್ಗಿ ಮತ್ತು ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದೆ.
Discussion about this post